ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ: ಸರ್ಕಾರಕ್ಕೆ ಸೆಡ್ಡು ಹೊಡೆದ ಹೊನ್ನಿಹಾಳ ಗ್ರಾಮಸ್ಥರು

Letest Post ಬೆಳಗಾವಿ ಶಿಕ್ಷಣ

ಬೆಳಗಾವಿ: ಏಳು ದಶಕಗಳಿಗೂ ಹಿರಿದಾದ ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ‌ ಎಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮಸ್ಥರು ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೇಕೆ ಬೇಕು ನ್ಯಾಯ ಬೇಕು ಅಂತ ತಮ್ಮೂರಿನ ಶಾಲೆಯ ಉಳಿವಿಗಾಗಿ ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಬಾಳೆಕುಂದ್ರಿ ಬಿಕೆ ಉರ್ದು ಹಿರಿಯ ಪ್ರಾಥಮಿಕ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿಸಿ ಹೊನ್ನಿಹಾಳ ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. 141 ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಬಡ ರೈತ- ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಎಐಡಿಎಸ್ಓ ಬೆಳಗಾವಿ ಜಿಲ್ಲಾ ಸಂಚಾಲಕ ಮಹಾಂತೇಶ ಬಿಳೂರ್ ಆಕ್ರೋಶ ವ್ಯಕ್ತಪಡಿಸಿದರು.

ಹೊನ್ನಿಹಾಳದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮರಾಠಿ ಕಿರಿಯ ಪ್ರಾಥಮಿಕ ಶಾಲೆ, ಸಾಂಬ್ರಾದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮರಾಠಿ ಹಿರಿಯ ಪ್ರಾಥಮಿಕ ಶಾಲೆ, ಬಾಳೆಕುಂದ್ರಿ ಕೆಎಚ್ ನ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಮರಾಠಿ ಹಿರಿಯ ಪ್ರಾಥಮಿಕ ಶಾಲೆ, ಬಾಳೆಕುಂದ್ರಿ ಬಿಕೆ ಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಕನ್ನಡ ಕಿರಿಯ ಪ್ರಾಥಮಿಕ ಶಾಲೆ (ಪಂತ್ ನಗರ) ಸೇರಿದಂತೆ 9 ಶಾಲೆಗಳನ್ನು ಮುಚ್ಚಿ ಬಾಳೆಕುಂದ್ರಿ ಬಿಕೆಯ ಮ್ಯಾಗ್ನೆಟ್ ಶಾಲೆಗೆ ಸೇರಿಸಲಾಗುತ್ತಿದೆ.

ಈ ರೀತಿ ಕೇವಲ ಬೆಳಗಾವಿ ಜಿಲ್ಲೆಯಲ್ಲೇ 2,283 ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಮುದಾಯದ ನಡುವೆ ಇರುವ ಊರಿನ ಶಾಲೆಗಳನ್ನು ಮುಚ್ಚಿ, ಮಕ್ಕಳನ್ನು ದೂರದ ಶಾಲೆಗೆ ತಲುಪಿಸಲು ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳುತ್ತಿರುವ ಸರ್ಕಾರವು ಸಾರಿಗೆ ವ್ಯವಸ್ಥೆಯ ಹೊರೆಯನ್ನು ಎಸ್ ಡಿ ಎಂ ಸಿ ತಲೆಯ ಮೇಲೆ ಹೊರೆಸಿದೆ. ಮ್ಯಾಗ್ನೆಟ್ ಶಾಲೆಯ ನಿರ್ವಹಣೆಯನ್ನು ಹೊರಗುತ್ತಿಗೆ ಕೊಡಲಾಗುತ್ತದೆ. ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ ಬಡ ಮಕ್ಕಳನ್ನು ಶಾಶ್ವತವಾಗಿ ದೂರ ತಳ್ಳುವ ಹುನ್ನಾರ ಎಂದು ಸರ್ಕಾರದ ನಿರ್ಧಾರವನ್ನು ಖಂಡಿಸಿದರು.

ಹೊನ್ನಿಹಾಳ ಶಾಲೆ ಉಳಿಸುವ ಹೋರಾಟಕ್ಕಾಗಿ ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಯನ್ನು ರಚಿಸಲಾಯಿತು. ಹೋರಾಟ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ಮಠದ ಮಾತನಾಡಿ, ಬಡವರ ಮಕ್ಕಳು ಓದುವ ಗ್ರಾಮೀಣ ಭಾಗದ ಶಾಲೆಗಳನ್ನು ಸೌಲಭ್ಯ ಒದಗಿಸಿ ಅಭಿವೃದ್ಧಿ ಪಡಿಸಬೇಕಾದ ಸರ್ಕಾರವೇ ಇಂದು ಶಾಲೆಗಳನ್ನು ಮುಚ್ಚುತ್ತಿದೆ. ಬದಲಿಗೆ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಕ್ಕಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಹಣವಂತರಿಗೆ ಮಾತ್ರ ಶಿಕ್ಷಣ ಎಂಬ ಷಡ್ಯಂತ್ರವನ್ನು ಸರ್ಕಾರ ರಚಿಸಿದೆ. ಹೊನ್ನಿಹಾಳ ಗ್ರಾಮಸ್ಥರೆಲ್ಲ ಒಗ್ಗಟ್ಟಿನಿಂದ ಹೋರಾಡುತ್ತೇವೆ. ಸರ್ಕಾರ ಜನರ ಹೋರಾಟವನ್ನು ಎದುರಿಸಲು ಸಿದ್ಧವಾಗಲಿ ಎಂದು ಎಚ್ಚರಿಕೆ ನೀಡಿದರು.

ಮುಚ್ಚುವ ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ಖಾಸಗಿಯವರಿಗೆ ಕೊಡುವ ಮಸೂದೆಯನ್ನು ಕರ್ನಾಟಕ ಸರ್ಕಾರವು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಿದೆ. ಇದನ್ನು ವಿರೋಧಿಸಲು ಮತ್ತು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಸುವರ್ಣಸೌಧ ಚಲೋ ಹೋರಾಟಕ್ಕೆ ಗ್ರಾಮಸ್ಥರೆಲ್ಲರೂ ಸಿದ್ದರಾಗಬೇಕೆಂಬ ನಿರ್ಧಾರವನ್ನು ಪ್ರತಿಭಟನೆಯ ನಂತರ ನಡೆದ ಸಭೆಯಲ್ಲಿ ಕೈಗೊಳ್ಳಲಾಯಿತು. ಎಐಡಿಎಸ್ಓ ರಾಜ್ಯ ಸಮಿತಿ ಸದಸ್ಯರಾದ ಕಿರಣ್ ಹಾಗೂ ರೋಹಿಣಿ ದೇಸಾಯಿ, ಮಂಜು ಕೆಂಗೇರಿ, ಗೌರಿ ಅಂಕಲಿ, ಬಸವರಾಜ್ ಅಸುಂಡಿ, ರೇಷ್ಮಾ ಗೋಡೆದುರ್ಗ ಸೇರಿದಂತೆ ಊರಿನ ಗ್ರಾಮಸ್ಥರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *