ಬೆಳಗಾವಿ: ಸವದತ್ತಿ ಬಳಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಖಾಸಗಿ ಪಿಎಸ್ ರಾಜೇಂದ್ರ ಪ್ರಸಾದ್ ಕಾರು ಅಪಘಾತವಾಗಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಡಿಸಿಎಂ ಖಾಸಗಿ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕನಿಗೂ ಗಾಯವಾಗಿದ್ದು, ಧಾರವಾಡದ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದು ವಾಪಸ್ ಆಗೋವಾಗ ಈ ದುರ್ಘಟನೆ ಸಂಭವಿಸಿದೆ.
ಇನ್ನು ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರನಟ್ಟಿ (30) ಮೃತ ದುರ್ದೈವಿಯಾಗಿದ್ದಾನೆ. ಮೃತ ಮಂಜುನಾಥ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದ ಎನ್ನಲಾಗಿದ್ದು, ಈ ವೇಳೆ ಕಾರು ಗುದ್ದಿ ಮಂಜುನಾಥ್ ತಲೆ ಭಾಗಕ್ಕೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನು ಅಪಘಾತದ ರಭಸಕ್ಕೆ ರಾಜೇಂದ್ರ ಪ್ರಸಾದ್ ಕಾರು ಪಲ್ಟಿಯಾಗಿದೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


