ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧಿಸದಿರಬಹುದು ಎಂದು ಹೇಳಿದ್ದಾರೆಯೇ ಹೊರತು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಹೇಳಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ತಾವು ಮುಂದಿನ ಚುನಾವಣೆಗೆ ರಾಜಕೀಯ ನಿವೃತ್ತಿ ಪಡೆಯಬಹುದು ಎಂದು ಹೇಳಿದ್ದರೂ, ಸಮಾಜದಲ್ಲಿರುವ ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವಿಷಯವನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದು, ಅದರಲ್ಲಿ ಹೊಸದೇನೂ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ರಾಜ್ಯಾದ್ಯಂತ ಪ್ರಚಾರ ನಡೆಸುವುದು ಖಚಿತ. ಚುನಾವಣೆಗೆ ಸ್ಪರ್ಧಿಸುವುದೇ ರಾಜಕೀಯದ ಏಕೈಕ ಅರ್ಥವಲ್ಲ. ಪಕ್ಷದ ಪರವಾಗಿ ಪ್ರಚಾರ ನಡೆಸಿ ಸಂಘಟನೆಯನ್ನು ಬಲಪಡಿಸುವ ಕೆಲಸವನ್ನು ಅವರು ಖಂಡಿತವಾಗಿ ಮಾಡಲಿದ್ದಾರೆ ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದೆ. ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದ ಬಳಿಕ ಸೂಕ್ತ ತೀರ್ಮಾನ ಕೈಗೊಂಡು ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.
ಇಂದು ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಗೆ ಬರುವ ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಅವರು ಹೇಳಿದರು. ಸಭೆಯಲ್ಲಿ ನಗರಕ್ಕೆ ಅಗತ್ಯವಿರುವ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಳಗಾವಿ ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿ ವಿಶೇಷ ಅನುದಾನದ ಹಣ ಬಿಡುಗಡೆಯಾಗದೆ ನಿಂತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ತಮಗೆ ಸದ್ಯ ಮಾಹಿತಿ ಇಲ್ಲ ಎಂದು ಹೇಳಿದರು. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು. ಅದೇ ವೇಳೆ, ಚುನಾಯಿತ ಪ್ರತಿನಿಧಿಗಳ ಆಡಳಿತ ಮಂಡಳಿ ಇಲ್ಲದ ಸ್ಥಳಗಳಲ್ಲಿ ಅನುದಾನ ಬಿಡುಗಡೆಯ ಪ್ರಕ್ರಿಯೆಗೆ ಕೆಲವು ಅಡಚಣೆಗಳು ಉಂಟಾಗಬಹುದು. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಅಗತ್ಯ ಅನುದಾನ ಲಭ್ಯವಾಗುತ್ತದೆ ಎಂದು ತಿಳಿಸಿದರು.
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ಎಲ್ & ಟಿ ಸಂಸ್ಥೆ 24×7 ಕುಡಿಯುವ ನೀರಿನ ಪೂರೈಕೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅನೇಕ ರಸ್ತೆಗಳನ್ನು ಅಗೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾಮಗಾರಿ ಪೂರ್ಣಗೊಂಡ ತಕ್ಷಣ ಅಗೆದ ರಸ್ತೆಗಳನ್ನು ಯಥಾಸ್ಥಿತಿಗೆ ತರುವುದು ಗುತ್ತಿಗೆದಾರರ ಜವಾಬ್ದಾರಿ ಎಂದು ಹೇಳಿದರು. ಎಲ್ಲಿ ರಸ್ತೆಗಳನ್ನು ಅಗೆದಿದ್ದಾರೋ ಅಲ್ಲಿಯೇ ಗುಣಮಟ್ಟದ ದುರಸ್ತಿ ಕಾಮಗಾರಿ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಅಗತ್ಯ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಬೆಳಗಾವಿ ಜಿಲ್ಲೆಗೆ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ, ಜಿಲ್ಲೆಯ ಅಗತ್ಯತೆಗಳ ಕುರಿತು ಇಂದಿನ ಸಭೆಯಲ್ಲಿ ಸಮಗ್ರ ಮಾಹಿತಿ ಪಡೆಯಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಕಾಮಗಾರಿಗಳನ್ನು ಗುರುತಿಸಿ, ರಾಜ್ಯ ಸರ್ಕಾರದ ಮೂಲಕ ಅನುಮೋದನೆ ಹಾಗೂ ಅನುದಾನ ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

